ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಜೂನ್ 16, ಸೋಮವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿದ್ದಾರೆ.
ಈ ರಜೆ ಪದವಿ ಪೂರ್ವ ಕಾಲೇಜುಗಳು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಈ ಶಿಕ್ಷಣ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿವೆ.
ಜಿಲ್ಲಾಡಳಿತದ ಈ ತೀರ್ಮಾನವು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದ್ದು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ವಮನವಿ ಮಾಡಲಾಗಿದೆ.