ಎಸ್ಎಂ ಕೃಷ್ಣ: ಹುಟ್ಟೂರಿನಲ್ಲಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ, ರಾಜ್ಯದಲ್ಲಿ ಶೋಕಾಚರಣೆ! ನಾಳೆ ಸರ್ಕಾರಿ ರಜೆ ಘೋಷಣೆ!

  • 10 Dec 2024 02:46:42 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರು 10.12.2024 ಮಂಗಳವಾರ ಮುಂಜಾನೆ 2.30 ಕ್ಕೆ ನಿಧನರಾದರು. 91 ವರ್ಷದ ವಯಸ್ಸಿನಲ್ಲಿದ್ದ ಕೃಷ್ಣ ಅವರು ತಮ್ಮ ದೀರ್ಘ ರಾಜಕೀಯ ಜೀವನದಲ್ಲಿ ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಅವರ ಅಗಲಿಕೆಗೆ ರಾಜ್ಯ ಸರ್ಕಾರ 3 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.  

 

ದಿವಂಗತರ ಅಂತ್ಯಕ್ರಿಯೆಯನ್ನು 11.12.2024 ಬುಧವಾರ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.

 

 ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರ ಗೌರವಾರ್ಥವಾಗಿ ರಾಜ್ಯ ಸರ್ಕಾರ 11.12.2024ರ ಬುಧವಾರದಂದು ಕರ್ನಾಟಕದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

 

ದಿನಾಂಕ 10.12.2024ರಿಂದ 12.12.2024 ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆಯನ್ನು ರಾಜ್ಯಾದ್ಯಂತ ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದೂ ಶೋಕಾಚರಣೆಯ ಅಂಗವಾಗಿ, ಈ ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದಾಗಿ ಕರ್ನಾಟಕ ರಾಜ್ಯಪಾಲರ ಆದೇಶದಂತೆ ಈ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ