ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದ ಬಾಕಿ ಇರುವ ಅರ್ಹ 94 ಸಿ ಅರ್ಜಿಗಳನ್ನು ಬರುವ ತಿಂಗಳು ಏಪ್ರಿಲ್ ಅಂತ್ಯದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕು ಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, 94 ಸಿ ಹಾಗೂ ಅಕ್ರಮ ಸಕ್ರಮ ಕಡತಗಳ ತ್ವರಿತ ವಿಲೇವಾರಿಗೆ ಆದೇಶ ನೀಡಿದರು. ಕುಂದಾಪುರ ತಾಲೂಕಿನ ಅಧಿಕಾರಿಗಳ ತಂಡ ಈ ಸಂಬಂಧ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಬಡ ಜನರ ಬಹುಕಾಲದ ಹಕ್ಕುಪತ್ರದ ಕನಸು ನನಸಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಂಡ್ಸೆ ಹೋಬಳಿಯ 10 ಗ್ರಾಮದಲ್ಲಿನ 20 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಭೂಮಿಯನ್ನು ಉಳಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಅವರು ಸೂಚನೆ ನೀಡಿದರು.
ಈ ಸಭೆಯಲ್ಲಿ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಉಪ ತಹಶೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ವಂಡ್ಸೆ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.